ಕರ್ನಾಟಕ ಸುದ್ದಿ

ಜನಸೇವೆ ಹಾಗು ಸಚಿವನಾಗಿ ದಕ್ಷತೆ ಮತ್ತು ಪ್ರಾಮಾಣಿಕತೆಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Posted by : Sirajuddin Bangar

ಚಿಕ್ಕಬಳ್ಳಾಪುರ – ಜೂನ್ 9, 2020: ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು, ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ಕೊವಿಡ್ ಸಂಕಷ್ಟದ ಸಮಯದಲ್ಲಿ ಹೊಸದಾಗಿ ಸಚಿವರಾದ ನಾವು ಹಗಲು ರಾತ್ರಿ ಲೆಕ್ಕಿಸದೇ ದುಡಿಯುತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರ ನೇತೃತ್ವದಲ್ಲಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕೃಷಿ ಸಚಿವ ಬಿ.ಸಿ ಪಾಟೀಲ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರೂ ಕಷ್ಟಪಟ್ಟು ಅತ್ಯಂತ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದರಿಂದ ಸರ್ಕಾರಕ್ಕೂ ಒಳ್ಳೆಯ ಹೆಸರು ಬಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಬಿ.ಎನ್.ಬಚ್ಚೇಗೌಡ, ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ಎಸ್.ಎನ್.ಸುಬ್ಬಾರೆಡ್ಡಿ, ಜಿ.ಪಂ ಅಧ್ಯಕ್ಷರಾದ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ರವಿಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಹಕಾರಿ ಧುರೀಣರು ಉಪಸ್ಥಿತರಿದ್ದರು.

ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಗುಂಪುಗಳಿಗೆ ನೀಡುತ್ತಿರುವಂತೆ ಆಶಾ ಕಾರ್ಯಕರ್ತೆಯರಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಕಳೆದ ಮೂರ್ನಾಲ್ಕು ತಿಂಗಳಿಂದ ಸ್ತ್ರೀಶಕ್ತಿ ಸಂಘಗಳಿಗೆ ಬಡ್ಡಿ ಕಡಿತ ಮಾಡಿ ಸಾಲ ನೀಡಲಾಗುತ್ತಿದೆ ಈ ಸಂಬಂಧ ಹೊರಡಿಸಿರುವ ಆದೇಶವನ್ನು ಹಿಂದೆ ಪಡೆಯಬೇಕು ಎಂದು ಸಹಕಾರ ಸಚಿವರನ್ನು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಆಗ್ರಹಿಸಿದರು.

ಕೋಲಾರ ಡಿಸಿಸಿ ಬ್ಯಾಂಕ್ ಹಾಗೂ ಕೋಲಾರ ಹಾಲು ಒಕ್ಕೂಟವನ್ನು ವಿಭಾಗಿಸಿ ನೂತನವಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಅಸ್ತಿತ್ವಕ್ಕೆ ತರಬೇಕು. ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಹಕಾರ ಸಚಿವರಲ್ಲಿ ಅವರು ಮನವಿ ಮಾಡಿದರು. ಜಿಲ್ಲೆ ಕೃಷಿ ಪ್ರಧಾನ ಪ್ರದೇಶವಾಗಿದ್ದು ತೋಟಗಾರಿಕೆ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ, ದ್ರಾಕ್ಷಿ ಮತ್ತಿತರೆ ತೋಟಗಾರಿಕೆ ಬೆಳೆಗಳ ಜೊತೆಗೆ ಹೂವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ನೆರವು ನೀಡುವ ನಿಟ್ಟಿನಲ್ಲಿ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸುವ ಅವಶ್ಯಕತೆ ಇದೆ ಎಂದರು.
ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಅತ್ಯುತ್ತಮ ಮಟ್ಟದಲ್ಲಿ ಕಾರ್ಯನಿರ್ವಹಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಇದಕ್ಕೆ ಕಾರಣ ಎಂದು ಸಚಿವರು ಹೇಳಿದರು.

ವಿಶೇಷ ಅವಕಾಶ ಸಾಧ್ಯವಿಲ್ಲ: ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರೋನಾ ಹಿನ್ನೆಲೆಯಲ್ಲಿ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ, ರಾಜಕೀಯ ಸಭೆ ಸಮಾರಂಭಗಳಿಗೆ ಅವಕಾಶ ನೀಡುತ್ತಿಲ್ಲ. ಇಲ್ಲಿ ನಾವಿಬ್ಬರು ಸಚಿವರು ಇದ್ದುಕೊಂಡೇ ಕೇವಲ ಐನೂರು ಜನರಿಗೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಶಿವಕುಮಾರ್ ಅವರಿಗೆ ವಿಶೇಷವಾಗಿ ಅವಕಾಶ ನೀಡಲು ಆಗುವುದಿಲ್ಲ ಎಂದರು.

ಅದಾಲತ್: ನಗರದ ಕಂದವಾರ ಕೆರೆ ಆವರಣದಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಅದಾಲತ್ ನಡೆಸಿದ ಸಚಿವರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಟ್ಟರು.

Continue

Related Articles

Leave a Reply

Your email address will not be published. Required fields are marked *

Back to top button
Close
Close